ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆಬ್ರವರಿ ೧೫ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಅಮಾನಿಕೆರೆ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿ “ಮೂಲ ಸಂಸ್ಕೃತಿ ಕನ್ನಡ ಸಂಸ್ಕೃತಿ: ೨೦೨೩” ತಳ ಸಮುದಾಯದ ನಶಿಸುತ್ತಿರುವ ವಿಶಿಷ್ಟ ಕಲಾಪರಂಪರೆಗೆ ಕಾಯಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತುಮಕೂರು ಜಿಲ್ಲೆಯಲ್ಲಿ ನಶಿಸಿ ಹೋಗುತ್ತಿರುವ ತಳಸಮುದಾಯದ ವಿಶಿಷ್ಟ ಕಲೆಗಳನ್ನು ಮುನ್ನೆಲೆಗೆ ತರಲು ಆಯವ್ಯಯದಲ್ಲಿ ಅವಕಾಶ ಕಲ್ಪಿಸಿದ್ದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಅಳಿವಿನಂಚಿನಲ್ಲಿರುವ ವಿವಿಧ ಐದು ಕಲೆಗಳಾದ ಯಕ್ಷಗಾನ ಬಯಲಾಟ, ಗೊರವರ ಕುಣಿತ, ಕೊಂಬು ಕಹಳೆ, ಪಟಕುಣಿತ ಮತ್ತು ಗಣೆವಾದ್ಯ ಕಲೆಗಳನ್ನು ಗುರುತಿಸಿ ತರಬೇತಿ ನೀಡಲಾಗಿದ್ದು, ಈ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯ ಸಂಸದರಾದ ಎ. ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ವಿ.ಸುನಿಲ್ ಕುಮಾರ್ ಅವರು ಪ್ರಮಾಣ ಪತ್ರ ವಿತರಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಗಣ್ಯರು ಪಾಲ್ಗೊಳ್ಳುವರು.