ಮೌಢ್ಯ ತೊಲಗಿಸಲು ಶಿಕ್ಷಣ ಅಗತ್ಯ-ನ್ಯಾ. ವೀರಪ್ಪ

ತುಮಕೂರು: ಅಜ್ಞಾನ, ಮೌಢ್ಯಗಳನ್ನು ತೊಲಗಿಸಬೇಕಾದರೆ ಮೊದಲು ನಾವು ವಿದ್ಯಾವಂತರಾಗಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕಾರ್ಯ ನಿರ್ವಾಹಕ ಅಧ್ಯಕ್ಷ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು.


ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತುಮಕೂರು ಹಾಗೂ ಶ್ರೀ ಸಿದ್ಧಗಂಗಾ ಮಠ ಸಹಾಯೋಗದಲ್ಲಿ ಮಂಗಳವಾರ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ಮಕ್ಕಳಿಗಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಕಾನೂನಿನ ಕೊರತೆಯಿಂದಾಗಿ ಅನೇಕ ತೊಡಕುಗಳು ಉಂಟಾಗಿ ಜೀವನವನ್ನು ಹಾಳು ಮಾಡಿಕೊಳ್ಳುವ ಪರಿಸ್ಥಿತಿ ಇದೆ. ೩ಲಕ್ಷ ಆದಾಯಕ್ಕಿಂತ ಕಡಿಮೆ ಇರುವ ಎಲ್ಲಾ ಹೆಣ್ಣು ಮಕ್ಕಳಿಗೂ ಉಚಿತ ಕಾನೂನು ನೆರವು ನೀಡಲಾಗುವುದು ಹಾಗೂ ದೌರ್ಜನ್ಯಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಪಟ್ಟ ಹೆಣ್ಣುಮಕ್ಕಳಿಗೆ, ಆಸೀಡ್ ದಾಳಿಗೆ ಒಳಗಾದ ಹಾಗೂ ಬಾಲ್ಯವಿವಾಹ ಇವುಗಳಿಗೆ ಒಳಗಾದ ಹೆಣ್ಣುಮಕ್ಕಳಿಗೆ ಕಾನೂನಿನ ಮೂಲಕ ರಕ್ಷಣೆ ಮಾಡಲಾಗುವುದು ಎಂದರು.
೬ ರಿಂದ ೧೪ವರ್ಷದೊಳಗಿನ ಮಕ್ಕಳಿಗೆ ಉಚಿತ ಕಾನೂನು ಸಲಹೆ ಹಾಗೂ ಉಚಿತ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅಂತೆಯೇ, ಶ್ರೀ ಸಿದ್ಧಗಂಗಾ ಮಠದಲ್ಲಿ ೧೦ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಮಹೋನ್ನತವಾದ ಜವಾಬ್ದಾರಿಯನ್ನು ನಿರ್ವಹಿಸಲಾಗುತ್ತಿದೆ ಎಂದು ಶ್ಲಾಘಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಬಿ. ಗೀತಾ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ ಜೈಶಂಕರ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಉಪ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್, ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನೀಸ ಹಾಗೂ ತುಮಕೂರು ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ದೊಡ್ಡಮನೆ ಗೋಪಾಲಗೌಡ ಮತ್ತಿತರರು ಉಪಸ್ಥಿತರಿದ್ದರು.

You May Also Like