ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲು ಜಿಲ್ಲಾಧಿಕಾರಿ ಸೂಚನೆ

 

ತುಮಕೂರು: ಮಾದಕ ವಸ್ತು, ಡ್ರಗ್ಸ್ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮವನ್ನು ಏರ್ಪಡಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜರುಗಿದ ಓಅಔಖಆ (NCORD (National Narcotics Coordination Portal) ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಕ್ಕಳು ಮಾದಕ ವಸ್ತುಗಳ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರಲ್ಲದೆ, ಸಮಿತಿಯನ್ನು ಮತ್ತಷ್ಟು ಬಲಪಡಿಸಲು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಮೆಡಿಕಲ್ ಮತ್ತು ಇಂಜಿನಿಯರಿAಗ್ ಕಾಲೇಜುಗಳ ಪ್ರಾಂಶುಪಾಲರು, ವಿಶ್ವವಿದ್ಯಾನಿಲಯದ ನಿಬಂಧಕರು, ಮತ್ತು ಡೀನ್‌ಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಿಕೊಳ್ಳಬೇಕೆಂದು ಸೂಚನೆ ನೀಡಿದರು.
ಸಮಿತಿಯ ಎಲ್ಲಾ ಸದಸ್ಯರುಗಳು, ಶಾಲಾ ಕಾಲೇಜುಗಳ ಪ್ರಾಂಶುಪಾಲರು ಪೊಲೀಸ್ ಅಧಿಕಾರಿಗಳಿಗೆ ಡ್ರಗ್ಸ್ ಮತ್ತು ನಾರ್ಕೋಟಿಕ್ ವಸ್ತುಗಳ ಬಳಕೆ/ ತಡೆಗಟ್ಟುವ ಹಾಗೂ ಕಾನೂನಿನ ಬಗ್ಗೆ ತರಬೇತಿ ನೀಡಲು ಎನ್‌ಸಿಬಿ ಅಧೀಕ್ಷಕರಿಗೆ ಮನವಿ ಮಾಡಬೇಕೆಂದು ತಿಳಿಸಿದರು.
ಗಾಂಜಾ ಬೆಳೆಯುವುದು ಕಾನೂನು ಬಾಹಿರ. ಈ ನಿಟ್ಟಿನಲ್ಲಿ ಗಾಂಜಾ ಬೆಳೆಯನ್ನು ಬೆಳೆಯಬಾರದು ಎಂದು ರೈತರಲ್ಲಿ ಅರಿವು ಮೂಡಿಸಬೇಕೆಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಗಾಂಜಾ ಗಿಡಗಳನ್ನು ಬೆಳೆಯುತ್ತಿರುವ ಬಗ್ಗೆ ಮಾಹಿತಿ ಇದ್ದಲ್ಲಿ ಕೃಷಿ ಇಲಾಖೆ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಶಿಕ್ಷಣ ಸಂಸ್ಥೆ ವಸತಿ ನಿಲಯಗಳಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳನ್ನು ನಿಷೇಧಿಸಲು ಆಯಾ ಶಿಕ್ಷಣ ಸಂಸ್ಥೆಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ವಸತಿ ನಿಲಯಗಳ ಪಾಲಕರು ವಿದ್ಯಾರ್ಥಿಗಳ ಮೇಲೆ ನಿಗಾ ಇಡಬೇಕು. ಅವರ ಕೋಣೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಮಾದಕ ವಸ್ತುಗಳ ಬಳಸುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ತಂಬಾಕು ಸೇವನೆ ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಾಗಾರವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಇನ್ನು ಮುಂದೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು ಮತ್ತು ಕಾನೂನಿನ ಬಗ್ಗೆಯೂ ಅರಿವು ಮೂಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್ ಮಾತನಾಡಿ, ಶಾಲಾ ಕಾಲೇಜುಗಳಲ್ಲದೆ ಹೋಟೆಲ್ ಹಾಗೂ ಪಿಜಿಗಳಲ್ಲೂ ಸಹ ಮಾದಕ ವಸ್ತುಗಳ ಬಳಕೆ ಹಾಗೂ ವೈದ್ಯಕೀಯ ಮತ್ತು ಇಂಜಿನಿಯರಿAಗ್ ವಿದ್ಯಾರ್ಥಿಗಳು ಮೆಡಿಕಲ್ ಸ್ಟೋರ್‌ಗಳಲ್ಲಿ ದೊರೆಯುವ ಔಷಧಿಗಳನ್ನು ಮಾದಕ ವಸ್ತುಗಳಾಗಿ ಉಪಯೋಗಿಸುವ ವ್ಯಸನಿಗಳಾಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದಾಗ, ಡಿಹೆಚ್‌ಓ ಡಾ: ಮಂಜುನಾಥ್ ಮಾತನಾಡಿ, ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿಯನ್ನು ರೋಗಿಗಳಿಗೆ ನೀಡಬಾರದೆಂದು ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್‌ಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಮರಿಯಪ್ಪ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

You May Also Like