ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ; ಡಿಸಿಗಳಿಗೆ ಆಯೋಗದ ಪತ್ರ

ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ; ಡಿಸಿಗಳಿಗೆ ಆಯೋಗದ ಪತ್ರ

ಬೆಂಗಳೂರು; ಕರ್ನಾಟಕ ದಲ್ಲಿ  ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯ ಚುನಾವಣಾ ಆಯೋಗ ಈ ಕುರಿತು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಪತ್ರದಲ್ಲಿ ಸೂಚನೆ ನೀಡಲಾಗಿದೆ.

ರಾಜ್ಯ ಚುನಾವಣಾ ಆಯೋಗ ಈಗಾಗಲೇ ಚುನಾವಣೆಗೆ ತಯಾರಿ ನಡೆಸುತ್ತಿದೆ. ಕೇಂದ್ರ ಚುನಾವಣಾ ಆಯೋಗದ ತಂಡ ಸಹ ರಾಜ್ಯಕ್ಕೆ ಆಗಮಿಸಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದೆ. ಜಿಲ್ಲಾಧಿಕಾರಿಗಳು, ರಾಜಕೀಯ ಪಕ್ಷಗಳ ಜೊತೆ ಸಭೆ ನಡೆಸಿದೆ. ಮಾರ್ಚ್ 27 ಅಥವ ಏಪ್ರಿಲ್ ಮೊದಲ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ.

ಈ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಪತ್ರದ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದೆ. ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಿ, ಮಾದರಿ ನೀತಿ ಸಂಹಿತೆ ಜಾರಿಗೆ ಬರಬಹುದು. ಮಾದರಿ ನೀತಿ ಸಂಹಿತೆ ಜಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಪತ್ರದಲ್ಲಿ ಸೂಚನೆ ಕೊಟ್ಟಿದೆ. ರಾಜಕೀಯ ನಾಯಕರ ಫೆಕ್ಸ್, ಬ್ಯಾನರ್ ತೆರವು ಮಾಡುವ ಕಾರ್ಯವನ್ನು ಈಗಾಗಲೇ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿಬಿಎಂಪಿ ಆಯುಕ್ತರು ಚುನಾವಣಾಧಿಕಾರಿಗಳಾಗಿರುತ್ತಾರೆ.

ಪತ್ರದಲ್ಲಿ ಏನಿದೆ?; ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಗೆ ಏಪ್ರಿಲ್ ಮತ್ತು ಮೇ ತಿಂಗಳ ನಡುವೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆ ಕೇಂದ್ರ ಚುನಾವಣಾ ಆಯೋಗದಿಂದ ಯಾವ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಆಗಬಹುದು. ಹೀಗಾಗಿ ಕೆಲವು ಮಾಡಲೇಬೇಕಾದ ಚುನಾವಣಾ ಪೂರ್ವ ಸಿದ್ಧತೆಯನ್ನು ಕಡ್ಡಾಯವಾಗಿ ಚುನಾವಣೆ ಘೋಷಣೆಗೆ ಮುನ್ನವೇ ಮಾಡಿ ಮುಗಿಸಬೇಕು ಎಂದು ಸೂಚಿಸಲಾಗಿದೆ.

ಚುನಾವಣಾ ಮಾದರಿ ನೀತಿ ಸಂಹಿತೆ ಮಾದರಿಯನ್ನು ಪತ್ರದೊಂದಿಗೆ ಲಗತ್ತಿಸಲಾಗಿದೆ. ಚುನಾವಣೆ ಘೋಷಣೆಯಾದ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುವ ನಿರೀಕ್ಷೆ ಇದೆ. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಸಹ ಜಾರಿಗೆ ಬರಲಿದೆ.

ಜಿಲ್ಲೆಗಳಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಈಗಾಗಲೇ ಚುನಾವಣಾ ಆಯೋಗದ ನಿರ್ದೇಶನದಂತೆ ಚೆಕ್‌ಪೋಸ್ಟ್‌ಗಳನ್ನು ರಚನೆ ಮಾಡಿದ್ದಾರೆ. ಮತದಾರರಿಗೆ ಹಂಚಲು ತರುತ್ತಿದ್ದ ಹಣ, ವಸ್ತುಗಳು, ಮದ್ಯವನ್ನು ವಶಕ್ಕೆ ಪಡೆಯುತ್ತಿದ್ದಾರೆ. ಇತರ ರಾಜ್ಯಗಳ ಜೊತೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳು ನೆರೆಯ ರಾಜ್ಯದ ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿ, ನ್ಯಾಯಸಮ್ಮತ ಚುನಾವಣೆ ನಡೆಸಲು ಸಹಕಾರ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು, ದಾವಣಗೆರೆ, ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಚುನಾವಣೆ ಘೋಷಣೆಗೂ ಮೊದಲೇ ಇದು ಪ್ರಧಾನಿಗಳ ಕೊನೆಯ ಭೇಟಿಯಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಅವರು ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಕರ್ನಾಟಕ ಸರ್ಕಾರ ಸಹ ಶುಕ್ರವಾರ ಕೊನೆಯ ಸಚಿವ ಸಂಪುಟ ಸಭೆಯನ್ನು ನಡೆಸಲಿದೆ.

ಚುನಾವಣಾ ಆಯಯೋಗ ಮತದಾನದತ್ತ ಗಮನ ಹರಿಸಿದೆ. ಬೆಂಗಳೂರು ನಗರದ 28 ಸೇರಿದಂತೆ ರಾಜ್ಯದ 900 ಮತಗಟ್ಟೆಗಳಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ವಿಶೇಷ ಅಭಿಯಾನವನ್ನು ಆಯೋಗ ಕೈಗೊಳ್ಳಲಿದೆ. ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಬೂತ್‌ಗಳು, ನಗರ ಪ್ರದೇಶಗಳ ಮತಗಟ್ಟೆಗಳನ್ನು ಗುರುತಿಸಿದ್ದು, ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಲು ವಿಶೇಷ ಗಮನಹರಿಸಲಾಗುತ್ತಿದೆ.

You May Also Like