ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮೇ.10ರಂದು ಮತದಾನ, ಮೇ.13ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ( Arogya Karnataka ID Card ) ವಿತರಣೆಯನ್ನು ರದ್ದುಗೊಳಿಸಲಾಗಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರಾದಂತ ರಂದೀಪ್ ಡಿ ಅವರು ತುರ್ತು ಸುತ್ತೋಲೆ ಹೊರಡಿಸಿದ್ದು, 2023ರ ಮೇ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ( Assembly Election 2023 ) ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆಯ ಕಾರಣ ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ, ಆರೋಗ್ಯ ಕರ್ನಾಟಕ ( AB-PMJAY-Ark ) ಗುರುತಿನ ಚೀಟಿಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡುವ ಪ್ರಕ್ರಿಯೆ ಸೇರಿದಂತೆ, ಗುರುತಿನ ಚೀಟಿಗೆ ಸಂಬಂಧಿತ ಎಲ್ಲಾ ಚಟುವಟಿಕೆಗಳನ್ನು ದಿನಾಂಕ 29-03-2023ರಿಂದ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿ ಆದೇಶಿಸಿದ್ದಾರೆ.