ನಗರದಲ್ಲಿ ಡಾ: ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಮರ್ಪಣೆ ಮಾಡಬೇಕು ಎಂದು ದಲಿತ ಮುಖಂಡರು ಒತ್ತಾಯಿಸಿದರು. ನಗರದ ಬಾಲ ಭವನ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪ.ಪಂಗಡಗಳ ಕುಂದು-ಕೊರತೆ ಸಭೆಯಲ್ಲಿ ದಲಿತ ಮುಖಂಡರು ಈ ಒತ್ತಾಯವನ್ನು ಮುಂದಿಟ್ಟರು.
ಜಿಲ್ಲೆಯ ದಲಿತ ಸಮುದಾಯಗಳು ನಗರದಲ್ಲಿ ಡಾ: ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮತ್ತು ಜಗಜೀವನ್ ರಾಮ್ ಸಮುದಾಯ ಭವನ ನಿರ್ಮಾಣ ಮಾಡಲು ಅನೇಕ ವರ್ಷಗಳಿಂದ ಸರ್ಕಾರದ ಮುಂದೆ ಬೇಡಿಕೆಯಿಟ್ಟರೂ ಸಹ ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂಬ ದಲಿತ ಮುಖಂಡರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬಾಬು ಜಗಜೀವನ್ ರಾಮ್ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸಮುದಾಯ ಭವನ ನಿರ್ಮಾಣ ಸ್ಥಳಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣ ಇತ್ಯರ್ಥಗೊಂಡ ತಕ್ಷಣವೇ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಮಹಾನಗರ ಪಾಲಿಕೆ ವತಿಯಿಂದ ಡಾ: ಬಿ.ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲು ಕ್ರಮ ಕೈಗೊಂಡಿದ್ದು ಶೀಘ್ರವಾಗಿ ಪ್ರತಿಮೆ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಪ.ಜಾತಿ ಮತ್ತು ಪ.ಪಂಗಡಗಳಿಗೆ ಸ್ಮಶಾನ ಭೂಮಿಯಿಲ್ಲದಿರುವ ಬಗ್ಗೆ ಸಮುದಾಯದ ಮುಖಂಡರ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಸ್ಮಶಾನಕ್ಕೆ ಭೂಮಿಯನ್ನು ಮೀಸಲಿಟ್ಟಿದ್ದು, ಸ್ಮಶಾನ ಭೂಮಿ ಅಭಿವೃದ್ಧಿ ಮತ್ತು ಸಂರಕ್ಷಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ.ಜಾತಿ ಮತ್ತು ಪ.ಪಂಗಡಗಳ ಜನಸಂಖ್ಯೆ ಕಡಿಮೆ ಇರುವ ಗ್ರಾಮಗಳಲ್ಲಿ ಗುರುತಿಸಲಾಗಿರುವ ಸಾರ್ವಜನಿಕ ಸ್ಮಶಾನದಲ್ಲಿ ಪ.ಜಾತಿ ಮತ್ತು ಪ.ಪಂಗಡ ಸಮುದಾಯಗಳ ಶವ ಸಂಸ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ತುಮಕೂರು ತಾಲ್ಲೂಕಿನ ಬಿಟ್ಟನಕುರಿಕೆ ಗ್ರಾಮದಲ್ಲಿ ಪ.ಜಾತಿ ಮತ್ತು ಪ.ಪಂಗಡದವರಿಗೆ ಸರ್ಕಾರದಿಂದ ಮಂಜೂರಾದ ಜಾಗವು ಕೆರೆಯ ಅಂಗಳ ಜಾಗವೆಂದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಸೂಕ್ತ ತನಿಖೆ ನಡೆಸಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಜಯಣ್ಣ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಇತ್ಯರ್ಥಗೊಳಿಸುವಂತೆ ತಹಶೀಲ್ದಾರ್ ರಾಜೇಶ್ವರಿ ಅವರಿಗೆ ಸೂಚನೆ ನೀಡಿದರು.
ಸೂರಿಲ್ಲದೆ ಗ್ರಾಮಗಳಲ್ಲಿ ವಾಸಿಸುತ್ತಿರುವ ಪ.ಜಾತಿ ಮತ್ತು ಪ.ಪಂಗಡದ ಸಮುದಾಯದವರಿಗೆ ಆಶ್ರಯ ಯೋಜನೆಯಡಿ ನಿವೇಶನ ಒದಗಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ ಈಗಾಗಲೇ 5000 ನಿವೇಶನಗಳನ್ನು ಗುರುತಿಸಲಾಗಿದ್ದು, ನಿವೇಶನ ಹಂಚಿಕೆ ಸಂದರ್ಭದಲ್ಲಿ ಮೀಸಲಾತಿ ಅಧಾರದ ಮೇಲೆ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಗೆ ಜಿಲ್ಲೆಯ ತುರುವೇಕೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ 19, ಗುಬ್ಬಿ-41, ಕೊರಟಗೆರೆ-9, ಕುಣಿಗಲ್-33, ತಿಪಟೂರು-17, ಚಿಕ್ಕನಾಯಕನಹಳ್ಳಿ-11, ಶಿರಾ-29, ಮಧುಗಿರಿ-11, ಪಾವಗಡ-19, ತುಮಕೂರು-34 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕೆ.ವಿ. ಆಶೋಕ್, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಆಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ, ಗೌರವ್ ಕುಮಾರ್ ಶೆಟ್ಟಿ, ವಿವಿಧ ತಾಲ್ಲೂಕುಗಳ ತಹಶೀಲ್ದಾರ್ಗಳು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ದಲಿತ ಮುಖಂಡರು ಉಪಸ್ಥಿತರಿದ್ದರು.