ತುಮಕೂರು ನಗರದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗಿ ಬರುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ಸಾರಿಗೆ ಸೌಲಭ್ಯವನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಟಿ.ಜೆ. ಗಿರೀಶ್ ರವರು ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ತುಮಕೂರಿನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವವರು ಹಾಗೂ ಕೆಂಪೇಗೌಡ ವಿಮಾನ ನಿಲ್ದಾಣದಿಂದ ತುಮಕೂರಿಗೆ ಬರುವ ಪ್ರಯಾಣಿಕರ ಅವಶ್ಯಕತೆಗೆ ಅನುಗುಣವಾಗಿ ರಾಜಹಂಸ ಹಾಗೂ ಇತರೆ ಕೆಎಸ್ಆರ್ಟಿಸಿ ಬಸ್ಗಳ ವ್ಯವಸ್ಥೆಯನ್ನು ಕಲ್ಪಿಸಿಕೊಡುವುದು ಹಾಗೂ ತುಮಕೂರಿನಿಂದ ಬೆಂಗಳೂರಿನ ನಾಗಸಂದ್ರ ಮೆಟ್ರೋ ಸ್ಟೇಷನ್ ಗೆ ನೇರವಾದ ಬಸ್ ವ್ಯವಸ್ಥೆಯನ್ನು ಕಲ್ಪಿಸಿ ಕೊಡುವುದು ಹಾಗೂ ಶಾಲಾ ಕಾಲೇಜುಗಳಿಗೆ ಓಡಾಡುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲಾ ಕಾಲೇಜುಗಳ ಮಾರ್ಗದಲ್ಲಿ ಬೆಳಿಗ್ಗೆ ಹಾಗೂ ಸಂಜೆ ಹೆಚ್ಚಿನ ಬಸ್ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಕೋರಿದ್ದಾರೆ.
ಪ್ರಯಾಣಿಕರಿಗೆ ಅನುಕೂಲವಾಗುವಂತೆ ಇನ್ನೂ ಹೆಚ್ಚಿನ ಬಸ್ ಶೆಲ್ಟರ್ಗಳನ್ನು ನಿರ್ಮಾಣ ಮಾಡುವುದು ಹಾಗೂ ಬಸ್ ಶೆಲ್ಟರ್ ಮುಂಭಾಗದಲ್ಲಿ ಬಸ್ ಗಳನ್ನು ನಿಲ್ಲಿಸುವಂತೆ ಕೆಎಸ್ಆರ್ಟಿಸಿ ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಸೂಚಿಸುವುದು ಹಾಗೂ ನಗರದ ಎಲ್ಲಾ ಎಕ್ಸಟೆನ್ಶನ್, ಜಂಕ್ಷನ್ಗಳಲ್ಲಿ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ನಿಲುಗಡೆ ಕೊಡುವುದು ಹಾಗೂ ಜಿಲ್ಲೆಯ ಕೈಗಾರಿಕಾ ಪ್ರದೇಶಗಳಿಗೆ ಉದ್ಯೋಗದ ನಿಮಿತ್ತ ಹೋಗಿ ಬರುವವರಿಗೆ ಅನುಕೂಲವಾಗುವಂತೆ ಕೈಗಾರಿಕಾ ಪ್ರದೇಶಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್, ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರಿಗೂ ಅವರು ಮನವಿ ಮಾಡಿದ್ದಾರೆ.